ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಗೆ ಸಂಕಲನಾತ್ಮಕ ಮೌಲ್ಯಮಾಪನದ ಹೊಣೆ
ಬೆಂಗಳೂರು: ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳಿಗೆ ಸಂಕಲನಾತ್ಮಕ ಮೌಲ್ಯಮಾಪನ (ಎಸ್‌ಎ-2) ಹಾಗೂ ವಾರ್ಷಿಕ ಪರೀಕ್ಷೆಗಳನ್ನು ನಡೆಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯನ್ನು ಸಕ್ಷಮ ಪ್ರಾಧಿಕಾರವನ್ನಾಗಿ ನೇಮಿಸಲಾಗಿದೆ.
ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ಎಲ್ಲ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲಾ-ಕಾಲೇಜುಗಳಿಗೂ ಪರೀಕ್ಷಾ ಮಂಡಳಿಯೇ ಇನ್ನು ಮುಂದೆ ಪ್ರಾಧಿಕಾರವಾಗಿ ಕಾರ್ಯನಿರ್ವಹಿಸುತ್ತದೆ. ಈ ಆದೇಶ ಪ್ರಸಕ್ತ ಶೈಕ್ಷಣಿಕ ಸಾಲಿನಿಂದಲೇ ಅನ್ವಯವಾಗಲಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹೊರಡಿಸಿದ ಆದೇಶದಲ್ಲಿ ವಿವರಿಸಿದೆ.
ಆದೇಶಕ್ಕೆ ಆಕ್ಷೇಪ: ಶೈಕ್ಷಣಿಕ ಅವಧಿಯ ಕೊನೆಯಲ್ಲಿ ವಿದ್ಯಾರ್ಥಿಗಳಿಗೆ ಸಂಕಲನಾತ್ಮಕ ಮೌಲ್ಯಮಾಪನ ಪರೀಕ್ಷೆಗಳನ್ನು ನೀಡಲಾಗುತ್ತದೆ. ಇದು ವ್ಯಾಪಕ ಮತ್ತು ನಿರಂತರ ಮೌಲ್ಯಮಾಪನದ ಭಾಗವಾಗಿ ಶಾಲಾ ಹಂತದಲ್ಲಿ ವಿಷಯ ಶಿಕ್ಷಕರು ಮಾಡಬೇಕಾದ ಮೌಲ್ಯಮಾಪನ. ಇದನ್ನು ಮಂಡಳಿಗೆ ವಹಿಸುವ ಅಗತ್ಯ ಏನಿದೆ ಎಂದು ಶಿಕ್ಷಣ ತಜ್ಞ ವಿ.ಪಿ.ನಿರಂಜನಾರಾಧ್ಯ ಪ್ರಶ್ನಿಸಿದ್ದಾರೆ.
ಶಾಲೆಯಲ್ಲಿ ವಿಷಯವಾರು ಶಿಕ್ಷಕರು ತಾವು ಕಲಿಸಲು ಅಳವಡಿಸಿಕೊಂಡ ವಿಷಯ ವಿಧಾನದ ಆಧಾರದಲ್ಲೇ ಸಂಕಲನಾತ್ಮಕ ಮೌಲ್ಯಮಾಪನ ಪರೀಕ್ಷೆಗಳನ್ನು ಮಾಡಬೇಕು. ಈ ನಿಯಮ ಸಿಬಿಎಸ್‌ಇ, ಐಸಿಎಸ್‌ಇ, ಬಿಎಸ್‌ಬಿ ಪಠ್ಯಕ್ರಮ ಶಾಲೆಗಳಿಗೆ ಅನ್ವಯಿಸುವುದಿಲ್ಲ. ಈ ಆದೇಶ ರಾಜ್ಯ ಪಠ್ಯಕ್ರಮ ಶಾಲೆಗಳನ್ನು ಮುಚ್ಚಿಸಲು ಮುನ್ನುಡಿಯಾಗಲಿದೆ ಎಂದು ಹೇಳಿದ್ದಾರೆ.
ರಾಜ್ಯ ಪಠ್ಯಕ್ರಮದ ಸರ್ಕಾರಿ ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ ಪ್ರೌಢ ಶಾಲೆಗಳಿಗೆ 2023-24ನೇ ಸಾಲಿನ ವಾರ್ಷಿಕ ಶೈಕ್ಷಣಿಕ ಮಾರ್ಗಸೂಚಿ ಅನುಷ್ಠಾನಗೊಳಿಸುವ ಕುರಿತು ಸಾರ್ವಜನಿಕ ಶಿಕ್ಷಣ ಇಲಾಖೆ ಸುತ್ತೋಲೆಯನ್ನು ಹೊರಡಿಸಿದೆ.
2023-24ನೇ ಸಾಲಿನ ಶೈಕ್ಷಣಿಕ ಚಟುವಟಿಕೆಗಳಿ ಪ್ರಾರಂಭವಾಗುತ್ತಿದ್ದು, ರಾಜ್ಯಾದ್ಯಂತ ಏಕರೂಪದ ಶಿಕ್ಷಣ ಯಶಸ್ವಿ ಅನುಷ್ಠಾನಕ್ಕಾಗಿ ವಾರ್ಷಿಕ ಶೈಕ್ಷಣಿಕ ಮಾರ್ಗಸೂಚಿಯನ್ನು ಸಿದ್ದಪಡಿಸಲಾಗಿದೆ.
ಸದರಿ ಮಾರ್ಗಸೂಚಿಯಲ್ಲಿ ವಾರ್ಷಿಕ/ಮಾಹೆವಾರು ಪಾಠ ಹಂಚಿಕೆ, ಪಠ್ಯೆತರ ಚಟುವಟಿಕೆಗಳು, ಪರೀಕ್ಷೆ ಮತ್ತು ಮೌಲ್ಯಾಂಕನ ವಿಶ್ಲೇಷಣೆ ಗುಣಮಟ್ಟದ ಶಿಕ್ಷಣಕ್ಕಾಗಿ ಫಲಿತಾಂಶಮುಖಿ ಚಟುವಟಿಕೆಗಳ ನಿರ್ವಹಣೆ ಹಾಗೂ ವಿವಿಧ ಶಾಲಾ ಹಂತದ ಸಿಸಿ ಚಟುವಟಿಕೆಗಳನ್ನು ನಿರ್ವಹಿಸಲು ಸಹಾಯವಾಗುವಂತೆ ಯೋಜಿಸಿ ವಾರ್ಷಿಕ ಶೈಕ್ಷಣಿಕ ಮಾರ್ಗಸೂಚಿಗಳನ್ನು ಸಿದ್ಧಪಡಿಸಲಾಗಿದೆ.
ರಾಜ್ಯದ ಎಲ್ಲಾ ಸರ್ಕಾರಿ ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 2023-24ನೇ ಶೈಕ್ಷಣಿಕ ಸಾಲಿನಲ್ಲಿ ಏಕರೂಪದ ಶೈಕ್ಷಣಿಕ ಚಟುವಟಿಕೆಗಳನ್ನು ಜಾರಿಗೊಳಿಸಲು ಅನುವಾಗುವಂತೆ ಶೈಕ್ಷಣಿಕ ಅವಧಿಗಳು ರಜಾ ದಿನಗಳನ್ನು ಮತ್ತು ವಾರ್ಷಿಕ ಕಾರ್ಯಸೂಚಿಯನ್ನು ನಿಗಧಿಪಡಿಸಲಾಗಿದೆ. ರಾಜ್ಯ ಪಠ್ಯಕ್ರಮದ ಎಲ್ಲಾ ಶಾಲೆಗಳಲ್ಲಿ ಅನುಷ್ಠಾನಗೊಳಿಸಿ ಮತ್ತು ಅನುಪಾಲನೆ ಮಾಡಲು ತಿಳಿಸಿದೆ.
No comments:
Post a Comment